ಬಂಡಾಯ ಸಾಹಿತಿ ಡಾ: ಸಿದ್ದಲಿಂಗಯ್ಯನವರು(67) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರಿಗೆ ಕೋರೊನಾ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (11.06.2021) ಸಂಜೆ 4.45ಕ್ಕೆ ನಿಧನರಾಗಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದ್ದ ಸಿದ್ದಲಿಂಗಯ್ಯನವರು ಬಾಲ್ಯದಲ್ಲೇ ಉತ್ತಮ ಭಾಷಣಕಾರರಾಗಿದ್ದರು. ವಿದ್ಯಾರ್ಥಿದೆಸೆಯಿಂದಲೇ ಸಾಹಿತ್ಯ ಆಸಕ್ತಿ ಬೆಳೆಸಿಕೊಂಡಿದ್ದ ಇವರು ಉತ್ತಮ ವಾಗ್ಮಿಯಾಗಿದ್ದರು. ಅಂಬೇಡ್ಕರ್, ಪೆರಿಯಾರ್ ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.
ಕಾವ್ಯ, ನಾಟಕ ಪ್ರಬಂಧ ವಿಮರ್ಶೆ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದ ಡಾ: ಸಿದ್ದಲಿಂಗಯ್ಯನವರು 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಊರು ಕೇರಿ ಇವರ ‘ಆತ್ಮ ಕಥನ’. ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ ಒಳಗೊಂಡಂತೆ ಹತ್ತು ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು.